ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ
ರಿಪ್ಪನ್ ಪೇಟೆ : ಇಂದಿನ ಆಧುನಿಕ ತಂತ್ರ ಜ್ಞಾನ ದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ, ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು.
ಪಟ್ಟಣದ ಗುಡ್ ಶೆಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು ತೋರಿಸುವ ಶಕ್ತಿಯಾಗಬೇಕು. ಶಿಸ್ತು, ಪ್ರಾಮಾಣಿಕತೆ, ಸಹಕಾರ, ಮಾನವೀಯ ಮೌಲ್ಯಗಳು ಶಿಕ್ಷಣದ ಅವಿಭಾಜ್ಯ ಅಂಗಗಳಾಗಬೇಕು ಎಂದು ಹೇಳಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಜ್ಞಾನವಷ್ಟೇ ಅಲ್ಲದೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟರು.
ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದಲ್ಲಿ ಶಿಕ್ಷಕರೊಂದಿಗೆ ಕೈಜೋಡಿಸಿ, ಮಕ್ಕಳ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತರುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಸಮಾಜಮುಖಿ ಚಿಂತನೆ, ರಾಷ್ಟ್ರಭಕ್ತಿ ಹಾಗೂ ಪರಿಸರ ಸಂರಕ್ಷಣೆ ಸ್ವಚ್ಚತೆಯ ಕುರಿತ ಅರಿವು ಮೂಡಿಸಬೇಕು, ನಮ್ಮ ಗ್ರಾಮೀಣ ಪ್ರದೇಶದ ಮಕ್ಕಳು ಕನ್ನಡ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆದು ಉನ್ನತ ಶಿಕ್ಷಣ ಪಡೆದು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಹೇಳಿದರು.
ಶಾಲಾ ಆಡಳಿತ ಮಂಡಳಿ ಸದಸ್ಯ ಸೆಬಾಸ್ಟಿಯನ್ ಮ್ಯಾಥ್ಯೂಸ್ ಮಾತನಾಡಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಶಿಕ್ಷಣವೇ ನಿಜವಾದ ಮೌಲ್ಯಯುತ ಶಿಕ್ಷಣವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಧರ್ಮಗುರುಗಳಾದ ಬಿನೋಯ್ ಮ್ಯಾಥ್ಯೂಸ್, ಆರಾಧನಾ ಸಂಸ್ಥೆಯ ಸಿಸ್ಟೆರ್ ಮರ್ಸಿ ಗ್ರಾಪಂ ಉಪಾಧ್ಯಕ್ಷರಾದ ಸುಧೀಂದ್ರ ಪೂಜಾರಿ , ಗ್ರಾಪಂ ಸದಸ್ಯರಾದ ಮಹಾಲಕ್ಷ್ಮಿ ಅಣ್ಣಪ್ಪ , ಶಿಕ್ಷಣ ಇಲಾಖೆಯ ಕರಿಬಸಪ್ಪ , ಜಗದೀಶ್ ಕಾಗಿನೆಲೆ , ಶಿವರಾಮ್ ಶಾಲಾ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ನೃತ್ಯ, ನಾಟಕ, ಹಾಡುಗಳ ಮೂಲಕ ಶಿಕ್ಷಣದ ಮಹತ್ವವನ್ನು ಸಾರಿದ ವಿದ್ಯಾರ್ಥಿಗಳ ಪ್ರದರ್ಶನಕ್ಕೆ ಸಭಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.