w
Headlines
Home » ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ

GridArt 20260215

ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ; ಯಡಮನೆ ರೈತರಿಗೆ ಸಚಿವ ಮಧು ಬಂಗಾರಪ್ಪ ಭರವಸೆ

ಯಡಮನೆ ಗ್ರಾಮದ ರೈತರಿಗೆ ಅರಣ್ಯ ಇಲಾಖೆ ನೋಟಿಸ್ ವಿಚಾರದಲ್ಲಿ ಆತಂಕ ಬೇಡ, ಒಕ್ಕಲೆಬ್ಬಿಸುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ರೈತರ ಹಿತ ಕಾಯಲು ಸರ್ಕಾರ ಬದ್ಧ.

ಶಿವಮೊಗ್ಗ: ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ ಬಗ್ಗೆ ರೈತರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾ ಉಸ್ತುವಾರಿಯೂ ಆಗಿರುವ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಯಡಮನೆ ಭಾಗದಲ್ಲಿ ನೀಡಲಾಗಿರುವ ನೋಟಿಸ್‌ಗಳು 2012–13ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡ ತೀರ್ಮಾನಗಳ ಆಧಾರದ ಮೇಲೆ ಈಗ ಜಾರಿಯಾಗುತ್ತಿರುವುದೇ ಹೊರತು, ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಹೊಸ ಆದೇಶಗಳಲ್ಲ ಎಂದು ಅವರು ತಿಳಿಸಿದ್ದಾರೆ. ನಮ್ಮ ಸರ್ಕಾರಕ್ಕೆ ರೈತರನ್ನು ಒಕ್ಕಲೆಬ್ಬಿಸುವ ಯಾವುದೇ ಉದ್ದೇಶವಿಲ್ಲ ಎಂದು ಅವರು ದೃಢವಾಗಿ ಹೇಳಿದ್ದಾರೆ.

ಈಗಾಗಲೇ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ನೇರವಾಗಿ ಮಾತನಾಡಿರುವುದಾಗಿ ತಿಳಿಸಿದ ಸಚಿವರು, ಯಾವುದೇ ಕಾರಣಕ್ಕೂ ರೈತರನ್ನು ಬಲವಂತವಾಗಿ ತೆರವುಗೊಳಿಸಬಾರದು ಎಂಬ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಅರಣ್ಯ ಹಕ್ಕು ಕಾಯ್ದೆಯಡಿ ಯಡಮನೆ ಗ್ರಾಮದ ಕೆಲ ರೈತರು ಸಲ್ಲಿಸಿರುವ ಅರ್ಜಿಗಳು, ಸೂಕ್ತ ದಾಖಲೆಗಳ ಕೊರತೆಯಿಂದ ಇನ್ನೂ ಊರ್ಜಿತವಾಗಿಲ್ಲ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಸಮಿತಿಗಳ ಮೂಲಕ ಮೇಲ್ಮನವಿ ಸಲ್ಲಿಕೆ, ಅರ್ಜಿಗಳ ಮರುಪರಿಶೀಲನೆ ಮತ್ತು ಅಗತ್ಯ ದಾಖಲೆಗಳನ್ನು ಒದಗಿಸುವ ಪ್ರಕ್ರಿಯೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

ರೈತರ ಮತ್ತು ಸಂತ್ರಸ್ತರ ಹಿತ ಕಾಯುವುದು ನಮ್ಮ ಸರ್ಕಾರದ ಮೊದಲ ಆದ್ಯತೆ. ಯಡಮನೆ ಗ್ರಾಮದ ಜನರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಸಚಿವ ಮಧು ಬಂಗಾರಪ್ಪ ಈ ಮೂಲಕ ಭರವಸೆ ನೀಡಿದ್ದಾರೆ.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.