Headlines

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ

ಅಜ್ಜಯ್ಯ, ದೇವರು, ಸಂವಿಧಾನ, ಅಂಬೇಡ್ಕರ್ ಹೆಸರಿನಲ್ಲಿ ಶಪಥ; ನೂತನ ಸಚಿವರ ಪ್ರಮಾಣವಚನದಲ್ಲಿ ವೈವಿಧ್ಯತೆ

Karnataka’s new ministers took oath in the name of God, the Constitution, Dr. B.R. Ambedkar, Veera Gangadhara Ajjaya and other revered figures. Here is the complete list of who swore by whom during the swearing-in ceremony.

ಬೆಂಗಳೂರು: ಲೋಕಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಭಕ್ತಿ, ಸಂವಿಧಾನಿಕ ಮೌಲ್ಯಗಳು ಮತ್ತು ವೈಚಾರಿಕ ನಂಬಿಕೆಗಳ ವಿಶಿಷ್ಟ ಸಂಗಮಕ್ಕೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ತಮ್ಮ ನೆಚ್ಚಿನ ಆರಾಧ್ಯ ದೈವ, ಭಾರತದ ಸಂವಿಧಾನ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ವಿವಿಧ ಧಾರ್ಮಿಕ-ಸಾಮಾಜಿಕ ಮಹನೀಯರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಗಮನ ಸೆಳೆದರು.

ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಕೈಯಲ್ಲಿ ಭಾರತದ ಸಂವಿಧಾನದ ಪ್ರತಿಯನ್ನು ಹಿಡಿದಿದ್ದು ವಿಶೇಷವಾಗಿತ್ತು.

ಯಾರ ಹೆಸರಿನಲ್ಲಿ ಯಾರು ಪ್ರಮಾಣವಚನ ಸ್ವೀಕರಿಸಿದರು?

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಕೈಯಲ್ಲಿ ಭಾರತದ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡಿದ್ದು ಎಲ್ಲರ ಗಮನ ಸೆಳೆಯಿತು.

1. ಡಾ ಜಿ ಪರಮೇಶ್ವರ್

ಡಾ ಜಿ ಪರಮೇಶ್ವರ್​ ಅವರು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ. ಜಿ. ಪರಮೇಶ್ವರ್ ಅವರು ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ ಸಂವಿಧಾನ ಶಿಲ್ಪಿ ಡಾ. ಬಿ ಆರ್​ ಅಂಬೇಡ್ಕರ್​ ಅವರ ಹೆಸರಿಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಮಧುಗಿರಿ ಹಾಗೂ ಕೊರಟಗೆರೆ ಕ್ಷೇತ್ರಗಳಿಂದ ಗೆಲುವು ಸಾಧಿಸುತ್ತಾ ಬಂದಿರುವ ಪರಮೇಶ್ವರ್, 2010 ರಿಂದ 2018 ರವರೆಗೆ ಸುದೀರ್ಘ ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಿದ್ದರು. 2015 ರಲ್ಲಿ ರಾಜ್ಯದ ಗೃಹ ಸಚಿವರಾಗಿದ್ದ ಇವರು, 2018 ರ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದರು.

2. ಕೆ.ಎಚ್. ಮುನಿಯಪ್ಪ

ಕೆ.ಎಚ್. ಮುನಿಯಪ್ಪ ಅವರು ಇಂದು ನೂತನ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. 1991ರಲ್ಲಿ ಮೊದಲ ಬಾರಿಗೆ ಕೋಲಾರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದ ಕೆ.ಎಚ್. ಮುನಿಯಪ್ಪ, ಅಂದಿನಿಂದ 2019ರವರೆಗೆ ಸತತ ಏಳು ಬಾರಿ ಸಂಸದರಾಗಿ ದಾಖಲೆ ಬರೆದಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವಿದ್ದಾಗ ರೈಲ್ವೆ ರಾಜ್ಯ ಸಚಿವರಾಗಿ ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಜ್ಯ ಸಚಿವರಾಗಿ ಅವರು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು.
2023ರಲ್ಲಿ ರಾಜ್ಯ ರಾಜಕಾರಣಕ್ಕೆ ಧುಮುಕಿದ ಮುನಿಯಪ್ಪ ಅವರು, ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿ ಜವಾಬ್ದಾರಿ ನಿಭಾಯಿಸಿದ್ದರು.

3. ಕೆ.ಜೆ. ಜಾರ್ಜ್

ಕೆ.ಜೆ. ಜಾರ್ಜ್ ಅವರು ಇಂದು ನೂತನ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. 1985ರಲ್ಲಿ ಬೆಂಗಳೂರಿನ ಭಾರಾತಿನಗರ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಕೆ.ಜೆ. ಜಾರ್ಜ್, 1989ರಲ್ಲೂ ಅದೇ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ತದನಂತರ ಸರ್ವಜ್ಞನಗರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾ ಬಂದಿದ್ದಾರೆ. 2023 ರಿಂದ ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಇಂಧನ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

4. ಎಂ.ಬಿ. ಪಾಟೀಲ್

ಎಂ.ಬಿ. ಪಾಟೀಲ್ (ಮಲ್ಲನಗೌಡ ಬಸನಗೌಡ ಪಾಟೀಲ್) ಅವರು ಇಂದು ನೂತನ ಸಚಿವರಾಗಿ ವಿಶ್ವಗುರು ಬಸವಣ್ಣನವರು, ಬಸವಾದಿ ಶರಣರು, ಸಿದ್ದೇಶ್ವರ ಮಹಾಸ್ವಾಮಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದಿಂದ 2008 ರಿಂದ ಸತತವಾಗಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಎಂ.ಬಿ. ಪಾಟೀಲ್, ರಾಜ್ಯ ಕಾಂಗ್ರೆಸ್‌ನ ಪ್ರಮುಖ ಲಿಂಗಾಯತ ನಾಯಕರಾಗಿದ್ದಾರೆ. ಈ ಹಿಂದೆ 2013 ರಿಂದ 2018 ರವರೆಗೆ ಜಲಸಂಪನ್ಮೂಲ ಸಚಿವರಾಗಿ ಮಹತ್ವದ ಕಾರ್ಯ ನಿರ್ವಹಿಸಿದ್ದ ಇವರು, 2023 ರಿಂದ ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾಗಿ ಜವಾಬ್ದಾರಿ ನಿಭಾಯಿಸಿದ್ದರು.

5. ರಾಮಲಿಂಗಾರೆಡ್ಡಿ

ರಾಮಲಿಂಗಾರೆಡ್ಡಿ ಅವರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. 1989ರಲ್ಲಿ ಮೊದಲ ಬಾರಿಗೆ ಜಯನಗರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ರಾಮಲಿಂಗಾರೆಡ್ಡಿ, ಅಂದಿನಿಂದ ಸತತವಾಗಿ ಜಯನಗರ (1994, 1999, 2004) ಹಾಗೂ ಬಿಟಿಎಂ ಲೇಔಟ್ (2008 ರಿಂದ ಪ್ರಸ್ತುತದವರೆಗೆ) ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಸುದೀರ್ಘ ಆಡಳಿತದ ಅನುಭವ ಹೊಂದಿರುವ ಇವರು ಈ ಹಿಂದಿನ ಕಾಂಗ್ರೆಸ್ ಸರ್ಕಾರಗಳಲ್ಲಿ ಗೃಹ ಸಚಿವರು, ಸಾರಿಗೆ ಸಚಿವರು ಹಾಗೂ ಮುಜರಾಯಿ ಸಚಿವರಾಗಿ ಪ್ರಮುಖ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.

6. ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ ಅವರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬೆಳಗಾವಿ ಜಿಲ್ಲೆಯ ಯಮಕನಮರಡಿ ವಿಧಾನಸಭಾ ಕ್ಷೇತ್ರದಿಂದ 2008 ರಿಂದ ಸತತವಾಗಿ ಗೆಲುವು ಸಾಧಿಸುತ್ತಾ ಬಂದಿರುವ ಸತೀಶ್ ಜಾರಕಿಹೊಳಿ, ಉತ್ತರ ಕರ್ನಾಟಕ ಭಾಗದ ಬಲಿಷ್ಠ ನಾಯಕರಾಗಿದ್ದಾರೆ. ಈ ಹಿಂದಿನ ಕಾಂಗ್ರೆಸ್ ಸರ್ಕಾರಗಳಲ್ಲೂ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದ ಇವರು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು.

7. ಕೃಷ್ಣ ಬೈರೇಗೌಡ

ಕೃಷ್ಣ ಬೈರೇಗೌಡ ಅವರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. 2008ರಲ್ಲಿ ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಕೃಷ್ಣ ಬೈರೇಗೌಡ, ಅಂದಿನಿಂದ ಸತತವಾಗಿ (2013, 2018 ಮತ್ತು 2023) ಅದೇ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಹಿಂದೆ 2013 ರಿಂದ 2018 ರವರೆಗಿನ ಕಾಂಗ್ರೆಸ್ ಸರ್ಕಾರದಲ್ಲಿ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ, 2023 ರಿಂದ ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

8. ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ ಅವರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರರಾಗಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಿಂದ 2013, 2018 ಮತ್ತು 2023ರಲ್ಲಿ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಪ್ರಿಯಾಂಕ್ ಖರ್ಗೆ, ಈ ಹಿಂದಿನ ಕಾಂಗ್ರೆಸ್ ಸರ್ಕಾರಗಳಲ್ಲಿ ಪ್ರವಾಸೋದ್ಯಮ, ಐಟಿ-ಬಿಟಿ (ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ) ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ನಂತಹ ಪ್ರಮುಖ ಇಲಾಖೆಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

9. ಯು.ಟಿ. ಖಾದರ್

ಯು.ಟಿ. ಖಾದರ್ ಅವರು ಇಂದು ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. 2007ರ ಉಪಚುನಾವಣೆಯಲ್ಲಿ ಉಳ್ಳಾಲ (ಪ್ರಸ್ತುತ ಮಂಗಳೂರು) ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಯು.ಟಿ. ಖಾದರ್, ಅಂದಿನಿಂದ ಸತತವಾಗಿ (2008, 2013, 2018 ಮತ್ತು 2023) ಅದೇ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಹಿಂದೆ 2013 ರಿಂದ 2018 ರವರೆಗಿನ ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಆರೋಗ್ಯ ಸಚಿವರಾಗಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿ ಕಾರ್ಯನಿರ್ವಹಿಸಿದ್ದ ಇವರು, 2023ರಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ (ಸ್ವೀಕರ್) ಜವಾಬ್ದಾರಿ ನಿಭಾಯಿಸಿದ್ದಾರೆ.

10. ಈಶ್ವರ್ ಖಂಡ್ರೆ

ಈಶ್ವರ್ ಖಂಡ್ರೆ ಅವರು ಇಂದು ಸಚಿವರಾಗಿ ದೇವರ ಮತ್ತು ಚೆನ್ನಬಸವ ಪಟ್ಟದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬೀದರ್ ಜಿಲ್ಲೆಯ ಭಾಲ್ಕಿ ವಿಧಾನಸಭಾ ಕ್ಷೇತ್ರದಿಂದ 2008 ರಿಂದ ಶಾಸಕರಾಗಿ ಆಯ್ಕೆಯಾಗುತ್ತಿದ್ದಾರೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಖಂಡ್ರೆ, ಈ ಹಿಂದಿನ ಕಾಂಗ್ರೆಸ್ ಸರ್ಕಾರಗಳಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

11. ಡಾ. ಯತೀಂದ್ರ

ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರು ಇಂದು ಸಚಿವರಾಗಿ ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವೃತ್ತಿಯಿಂದ ವೈದ್ಯರಾಗಿರುವ ಡಾ. ಯತೀಂದ್ರ ಅವರು, 2018 ರಿಂದ 2023 ರವರೆಗೆ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ (MLC) ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ.

12. ಭೈರತಿ ಸುರೇಶ್

ಭೈರತಿ ಸುರೇಶ್ ಅವರು ಇಂದು ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದಿಂದ 2018 ಮತ್ತು 2023ರ ಚುನಾವಣೆಯಲ್ಲಿ ಜಯಗಳಿಸಿರುವ ಭೈರತಿ ಸುರೇಶ್, ಸಿದ್ದರಾಮಯ್ಯ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

13. ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್

ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಇಂದು ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಕಲಬುರಗಿ ಜಿಲ್ಲೆಯ ಸೇಡಂ ವಿಧಾನಸಭಾ ಕ್ಷೇತ್ರದಿಂದ 2004, 2008 ಮತ್ತು 2013 ರಲ್ಲಿ ಸತತ ಮೂರು ಬಾರಿ ಜಯಗಳಿಸಿದ್ದ ಇವರು, 2018 ರ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ತದನಂತರ 2023 ರ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಿದ್ದರಾಮಯ್ಯ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಜವಾಬ್ದಾರಿ ನಿಭಾಯಿಸಿದ್ದರು.

About The Author