Headlines

ಕರ್ತವ್ಯದಲ್ಲೇ ಕುಸಿದು ಮೃತಪಟ್ಟ BLO ಮಂಜುಳಾ – ಕುಟುಂಬಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

ಕರ್ತವ್ಯದಲ್ಲೇ ಕುಸಿದು ಮೃತಪಟ್ಟ BLO ಮಂಜುಳಾ – ಕುಟುಂಬಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸಾಂತ್ವನ

Shivamogga Deputy Commissioner Prabhulinga Kavalikatti visited the residence of deceased BLO and teacher Manjula, who died while on SIR election duty, and assured the family of government assistance

ಶಿವಮೊಗ್ಗ, ಜುಲೈ 7: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೃತಪಟ್ಟ ಬೂತ್ ಮಟ್ಟದ ಅಧಿಕಾರಿ (BLO) ಹಾಗೂ ಶಿಕ್ಷಕಿ ಮಂಜುಳಾ (50) ಅವರ ನಿವಾಸಕ್ಕೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಮಂಗಳವಾರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಭದ್ರಾವತಿ ತಾಲೂಕಿನ ಕಲ್ಲಾಪುರ ಸಮೀಪದ ಕೋಡಿ ಹೊಸೂರು ಗ್ರಾಮದಲ್ಲಿ ಎಸ್‌ಐಆರ್ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಮಂಜುಳಾ ಅವರು ಏಕಾಏಕಿ ಕುಸಿದು ಬಿದ್ದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ದುರ್ಘಟನೆ ಆಡಳಿತ ವಲಯದಲ್ಲಿ ತೀವ್ರ ವಿಷಾದಕ್ಕೆ ಕಾರಣವಾಗಿದೆ.

ಮೃತರ ಪಾರ್ಥಿವ ಶರೀರದ ದರ್ಶನ ಪಡೆದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು. ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಾನುಸಾರ ಕುಟುಂಬಕ್ಕೆ ದೊರೆಯಬೇಕಾದ ಪರಿಹಾರ ಹಾಗೂ ಇತರ ಸೌಲಭ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

About The Author