ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು–ನಿಕೋಟಿನ್ ಉತ್ಪನ್ನಗಳ ಸಂಪೂರ್ಣ ನಿಷೇಧ
Karnataka government bans manufacture, storage, transport, distribution and sale of tobacco and nicotine products including gutka and pan masala across the state for one year.
ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ನಿಯಮಗಳ ಅಡಿಯಲ್ಲಿ ಸರ್ಕಾರ ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ನಿಷೇಧಿತ ಉತ್ಪನ್ನಗಳ ಮಾರಾಟ ಹಾಗೂ ಅಕ್ರಮ ದಾಸ್ತಾನು ವಿರುದ್ಧ ರಾಜ್ಯದಾದ್ಯಂತ ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಮತ್ತು ದಾಳಿ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ.
ಈ ಕುರಿತು ಆಗಸ್ಟ್ 10ರಂದು ಸರ್ಕಾರಿ ಅಧಿಸೂಚನೆ ಹೊರಡಿಸಲಾಗಿದ್ದು, ಅಧಿಸೂಚನೆ ಪ್ರಕಟವಾದ ದಿನಾಂಕದಿಂದ ಒಂದು ವರ್ಷದ ಅವಧಿಗೆ ನಿಷೇಧ ಜಾರಿಯಲ್ಲಿರಲಿದೆ.
ರಾಜ್ಯದ ಯಾವುದೇ ಭಾಗದಲ್ಲಿ ನಿಷೇಧಿತ ತಂಬಾಕು ಅಥವಾ ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ ಅಥವಾ ಮಾರಾಟ ಕಂಡುಬಂದರೆ ಸಾರ್ವಜನಿಕರು ತಕ್ಷಣ ಸಂಬಂಧಪಟ್ಟ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮನವಿ ಮಾಡಿದೆ.
ಆರೋಗ್ಯಕರ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಾರ್ವಜನಿಕರು ಸರ್ಕಾರದೊಂದಿಗೆ ಸಹಕರಿಸುವಂತೆ ಇಲಾಖೆಯ ಆಯುಕ್ತರು ಕೋರಿದ್ದಾರೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್