ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಗೆ ತಹಶೀಲ್ದಾರ್ ದಿಢೀರ್ ದಾಳಿ; ಜೆಸಿಬಿ ವಶಕ್ಕೆ, ಪ್ರಕರಣ ದಾಖಲು
Sagar Tahsildar Dr. Prathibha R conducted a surprise raid on an alleged illegal stone quarry in Kanle village, seized a JCB and registered a case.
ಸಾಗರ: ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸಾಗರ ತಾಲೂಕು ಆಡಳಿತದ ಕಾರ್ಯಾಚರಣೆ ಮುಂದುವರಿದಿದ್ದು, ತಹಶೀಲ್ದಾರ್ ಡಾ. ಪ್ರತಿಭಾ ಆರ್ ಅವರು ತಾಳಗುಪ್ಪ ಹೋಬಳಿಯ ಕಾನ್ಲೆ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಜಂಬಿಟ್ಟಿಗೆ ಕಲ್ಲು ಕ್ವಾರಿಯ ಮೇಲೆ ದಿಢೀರ್ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಸಾರ್ವಜನಿಕರಿಂದ ಬಂದ ದೂರಿನ ಆಧಾರದ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ಆರ್ ಅವರು ಕಾನ್ಲೆ ಗ್ರಾಮದ ಸರ್ವೆ ನಂಬರ್ 123ರ ವ್ಯಾಪ್ತಿಯ ಹಿಡುವಳಿ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಗಣಿಗಾರಿಕೆ ಸ್ಥಳಕ್ಕೆ ದಾಳಿ ನಡೆಸಿದರು.
ಈ ವೇಳೆ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ತಹಶೀಲ್ದಾರ್ ಅವರ ಜೀಪ್ ಕಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸ್ಥಳದಿಂದ ಹೊರಟು ಹೋಗಲು ಯತ್ನಿಸುತ್ತಿದ್ದ ಜೆಸಿಬಿಯನ್ನು ಬೆನ್ನಟ್ಟಿ ಹಿಡಿದ ಅಧಿಕಾರಿಗಳು ಅದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ.
ಅಕ್ರಮ ಗಣಿಗಾರಿಕೆ ವಿರುದ್ಧ ನಿರಂತರ ಕಾರ್ಯಾಚರಣೆ
ತಹಶೀಲ್ದಾರ್ ಡಾ. ಪ್ರತಿಭಾ ಆರ್ ಅವರು ಸಾಗರ ತಾಲೂಕಿನಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಅಕ್ರಮ ಕಲ್ಲು ಗಣಿಗಾರಿಕೆ ಹಾಗೂ ಮರಳು ಗಣಿಗಾರಿಕೆ ವಿರುದ್ಧ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಹಲವು ಕಡೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಂಡಿದ್ದರೂ, ಕೆಲವು ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಮುಂದುವರಿದಿರುವ ಬಗ್ಗೆ ದೂರುಗಳು ಬರುತ್ತಿವೆ.
ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ ಎಂ.ಜಿ. ನಾಯಕ್ ಉಪಸ್ಥಿತರಿದ್ದರು.
ಸಾರ್ವಜನಿಕರ ಅಳಲು
ಅಕ್ರಮ ಕಲ್ಲು ಗಣಿಗಾರಿಕೆಯಿಂದ ಸಂಚರಿಸುವ ಭಾರೀ ವಾಹನಗಳಿಂದ ಗ್ರಾಮೀಣ ರಸ್ತೆಗಳು ಹಾಳಾಗುತ್ತಿವೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ರಸ್ತೆಗಳ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಅಕ್ರಮ ಗಣಿಗಾರಿಕೆ ದಂಧೆಗೆ ಸಂಪೂರ್ಣ ಕಡಿವಾಣ ಹಾಕುವಂತೆ ತಾಲೂಕು ಆಡಳಿತವನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಅಕ್ರಮ ಗಣಿಗಾರಿಕೆಗೆ ಅವಕಾಶವಿಲ್ಲ: ತಹಶೀಲ್ದಾರ್ ಡಾ. ಪ್ರತಿಭಾ ಆರ್
ಸಾಗರ ತಾಲೂಕಿನಲ್ಲಿ ಕೆಲವು ಕಡೆ ಅಕ್ರಮ ಕಲ್ಲು ಹಾಗೂ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆಯುತ್ತಿದ್ದು, ತಾಲೂಕು ಆಡಳಿತ ನಿರಂತರವಾಗಿ ದಿಢೀರ್ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಿದೆ ಎಂದು ತಹಶೀಲ್ದಾರ್ ಡಾ. ಪ್ರತಿಭಾ ಆರ್ ತಿಳಿಸಿದ್ದಾರೆ.
ಅಕ್ರಮ ಗಣಿಗಾರಿಕೆಯನ್ನು ತಾಲೂಕು ಆಡಳಿತ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕಾನೂನು ಉಲ್ಲಂಘಿಸಿ ಅಕ್ರಮ ಗಣಿಗಾರಿಕೆಯಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.