ಶಿವಮೊಗ್ಗ: ದಸರಾ ವೇದಿಕೆಯಲ್ಲಿ ವಂದೇ ಮಾತರಂ ವಿವಾದ; ಆಯುಕ್ತರ ವಿರುದ್ಧ ಕಾಂಗ್ರೆಸ್ ಆಕ್ರೋಶ | Shivamogga Dasara Vande Mataram controversy: Congress leaders walk out of the inauguration and demand the dismissal of Municipal Corporation Commissioner Mayannagowda.
ಶಿವಮೊಗ್ಗ, ಅಕ್ಟೋಬರ್ 11: ಶಿವಮೊಗ್ಗ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಗೀತೆಯನ್ನು ಪೂರ್ಣವಾಗಿ ಹಾಡಿದ ವಿಚಾರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದ ಸೂಚನೆಗಳನ್ನು ಉಲ್ಲಂಘಿಸಿ ಸಂಪೂರ್ಣ ಗೀತೆಯನ್ನು ಹಾಡಿಸಲಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡರು, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಅವರನ್ನು ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಏನಿದು ವಿವಾದ?
ಶಿವಮೊಗ್ಗದ ಕೋಟೆ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಭಾನುವಾರ ನಡೆದ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಹಿರಿಯ ನಟ ಶ್ರೀನಾಥ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆ ಹಾಗೂ ನಾಡಗೀತೆಯನ್ನು ಹಾಡುವ ವ್ಯವಸ್ಥೆ ಮಾಡಲಾಗಿತ್ತು.
ರಾಜ್ಯ ಸರ್ಕಾರದ ಸೂಚನೆಯಂತೆ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸಂಗೀತ ವ್ಯವಸ್ಥೆ ಮಾಡಲಾಗಿತ್ತು ಎನ್ನಲಾಗಿದೆ. ಆದರೆ, ಗಾಯಕಿಯರು ಎರಡು ಚರಣಗಳನ್ನು ಹಾಡಿದ ಬಳಿಕವೂ ಗೀತೆಯನ್ನು ಮುಂದುವರಿಸಿ ಪೂರ್ಣವಾಗಿ ಹಾಡಿದ್ದಾರೆ. ಈ ಬೆಳವಣಿಗೆಯಿಂದ ಕಾರ್ಯಕ್ರಮದ ವೇದಿಕೆಯಲ್ಲೇ ಗೊಂದಲ ಉಂಟಾಯಿತು.
ಕಾಂಗ್ರೆಸ್ ಮುಖಂಡರ ಆಕ್ಷೇಪ
ಸರ್ಕಾರದ ನಿರ್ದೇಶನಗಳನ್ನು ಪಾಲಿಸದೆ ಪೂರ್ಣ ವಂದೇ ಮಾತರಂ ಹಾಡಲು ಅವಕಾಶ ನೀಡಿರುವುದಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ. ಯೋಗೀಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ವೇದಿಕೆಯ ಮೇಲೆಯೇ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಅವರನ್ನು ಪ್ರಶ್ನಿಸಿದ ಕಾಂಗ್ರೆಸ್ ನಾಯಕರು, ಸರ್ಕಾರದ ಸೂಚನೆಗಳನ್ನು ಪಾಲಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಕಾರ್ಯಕ್ರಮವನ್ನು ಬಹಿಷ್ಕರಿಸಿ ವೇದಿಕೆಯಿಂದ ಹೊರನಡೆದರು.
ಜವಳಿ ಮತ್ತು ಕೈಮಗ್ಗ ಕ್ಷೇತ್ರದ ನಿಗಮದ ಅಧ್ಯಕ್ಷ ಕೆ. ಚೇತನ್, ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ.ಜೆ. ಮಧುಸೂದನ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆಯುಕ್ತರ ವಜಾಕ್ಕೆ ಆಗ್ರಹ
ಘಟನೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ. ಯೋಗೀಶ್, ದಸರಾ ಕಾರ್ಯಕ್ರಮದ ಉಸ್ತುವಾರಿ ವಹಿಸಿರುವ ಮಹಾನಗರ ಪಾಲಿಕೆ ಆಯುಕ್ತರು ಸರ್ಕಾರದ ಸುತ್ತೋಲೆಯನ್ನು ಪಾಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸಿ ಕಾರ್ಯಕ್ರಮದಲ್ಲಿ ಪೂರ್ಣ ವಂದೇ ಮಾತರಂ ಹಾಡಲು ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಆಯುಕ್ತರನ್ನು ತಕ್ಷಣ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
“ನಾವು ದಸರಾ ಮಹೋತ್ಸವದ ವಿರೋಧಿಗಳಲ್ಲ. ಆದರೆ, ಸರ್ಕಾರದ ಸೂಚನೆಗಳನ್ನು ಪಾಲಿಸದ ಕಾರ್ಯಕ್ರಮದಲ್ಲಿ ಮುಂದುವರಿಯಲು ಸಾಧ್ಯವಿಲ್ಲ” ಎಂಬ ನಿಲುವನ್ನು ಕಾಂಗ್ರೆಸ್ ಮುಖಂಡರು ವ್ಯಕ್ತಪಡಿಸಿದರು.
ರಾಜ್ಯಮಟ್ಟದಲ್ಲಿ ಚರ್ಚೆಗೆ ಕಾರಣವಾದ ವಂದೇ ಮಾತರಂ
ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಎಷ್ಟು ಚರಣಗಳನ್ನು ಹಾಡಬೇಕು ಎಂಬ ವಿಚಾರ ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಶಿವಮೊಗ್ಗದಲ್ಲಿಯೂ ಈ ಹಿಂದೆ ನಡೆದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು.
ಇದೀಗ ದಸರಾ ಉದ್ಘಾಟನಾ ವೇದಿಕೆಯಲ್ಲಿಯೇ ವಿವಾದ ಉಂಟಾಗಿರುವುದು ಸ್ಥಳೀಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
