w
Headlines
Home » ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬಲ: ಕಮದೂರಿನಲ್ಲಿ ₹17 ಕೋಟಿ ವೆಚ್ಚದ ಶಾಲೆಗೆ ಶಾಸಕ ಬೇಳೂರು ಶಂಕುಸ್ಥಾಪನೆ

ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬಲ: ಕಮದೂರಿನಲ್ಲಿ ₹17 ಕೋಟಿ ವೆಚ್ಚದ ಶಾಲೆಗೆ ಶಾಸಕ ಬೇಳೂರು ಶಂಕುಸ್ಥಾಪನೆ

Screenshot 2026 10 17 19 20 22 439 com.openai.chatgpt edit

ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬಲ: ಕಮದೂರಿನಲ್ಲಿ ₹17 ಕೋಟಿ ವೆಚ್ಚದ ಶಾಲೆಗೆ ಶಾಸಕ ಬೇಳೂರು ಶಂಕುಸ್ಥಾಪನೆ | A ₹17 crore Dr. B.R. Ambedkar Residential School building project was inaugurated by MLA Gopalakrishna Belur at Kamadooru in Shivamogga district, Karnataka, to improve education and residential facilities for rural students.

ರಿಪ್ಪನ್‌ಪೇಟೆ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಲುವಳ್ಳಿ ಗ್ರಾಮದ ಮಜರೆ ಕಮದೂರಿನಲ್ಲಿ ₹17 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ನೂತನ ಕಟ್ಟಡಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಶುಕ್ರವಾರ ಸಂಜೆ ಶಂಕುಸ್ಥಾಪನೆ ನೆರವೇರಿಸಿದರು.

ಶಂಕುಸ್ಥಾಪನೆ ನೆರವೇರಿಸುವ ಮೂಲಕ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಅವರು, ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ವಸತಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರ ಆದ್ಯತೆ ನೀಡುತ್ತಿದೆ. ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಕರೆ ನೀಡಿದರು.

ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂದೇಶ ಸಾರಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳು ಹಾಗೂ ಸಂವಿಧಾನದ ಆಶಯಗಳ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಸುರಕ್ಷಿತ ವಸತಿ, ಅಧ್ಯಯನಕ್ಕೆ ಅನುಕೂಲಕರ ವಾತಾವರಣ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಪ್ರಕೃತಿಯ ಮಡಿಲಿನಲ್ಲಿರುವ ಉತ್ತಮ ಪರಿಸರದಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದರು.

ಕಾಮಗಾರಿಯನ್ನು 11 ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಗುತ್ತಿಗೆದಾರರು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕಟ್ಟಡವನ್ನು ಲೋಕಾರ್ಪಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಿವಮೊಗ್ಗ ಜಿಲ್ಲಾ ಸಮನ್ವಯಾಧಿಕಾರಿ ಹಾಗೂ ಪ್ರಾಚಾರ್ಯ ಟಿ.ಕೆ. ಚಂದ್ರಪ್ಪ ಮಾತನಾಡಿ, ರಾಜ್ಯದಲ್ಲಿ 874 ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 34 ಶಾಲೆಗಳಿವೆ ಎಂದು ತಿಳಿಸಿದರು.

ಶಿಕ್ಷಕರ ಪರಿಶ್ರಮ ಹಾಗೂ ಗುಣಮಟ್ಟದ ಬೋಧನೆಯಿಂದ ಈ ಶಾಲೆಗಳ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿ ಪ್ರೋತ್ಸಾಹ ನೀಡುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಎಚ್.ಬಿ. ಚಿದಂಬರಂ  ಮಾತನಾಡಿ ಶಾಸಕ ಗೋಪಾಲಕೃಷ್ಣ ಬೇಳೂರು ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಅನುದಾನ ತರುತ್ತಿದ್ದರೂ ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀಕ್ಷಕ ಎಂಜಿನಿಯರ್ ನಳಿನಾಕ್ಷಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲೇಶಪ್ಪ, ಹೊಸನಗರ ತಾಲೂಕು ತಹಶೀಲ್ದಾರ್ ಭರತ್‌ರಾಜ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನರೇಂದ್ರಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್, ಕಮದೂರು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಪ್ರಾಚಾರ್ಯ ಚಂದ್ರಪ್ಪ ಎಚ್. ಕೆಂಚನಾಲ ಗ್ರಾಪಂ ಮಾಜಿ ಅಧ್ಯಕ್ಷರಾದ ಉಬೇದುಲ್ಲಾ, ಮಹಮ್ಮದ್ ಷರೀಫ್, ಮುಖಂಡರಾದ ಎಚ್.ವಿ. ಈಶ್ವರಪ್ಪಗೌಡ, ಬಂಡಿ ರಾಮಚಂದ್ರ, ಅಮ್ಮೀರಹಂಜಾ,  ಪರಮೇಶ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

ಪ್ರಣತಿ ಅಣ್ಣಪ್ಪ ಪ್ರಾರ್ಥಿಸಿದರು. ವಸತಿ ಶಾಲೆಯ ಪ್ರಾಚಾರ್ಯ ಚಂದ್ರಪ್ಪ ಎಚ್. ಸ್ವಾಗತಿಸಿದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.