ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಸಂಸತ್ತು: ಕಾವೇರಿ ವಿವಾದ, ನಿರುದ್ಯೋಗದ ಬಗ್ಗೆ ಚರ್ಚೆ! | Students discuss Cauvery water dispute, unemployment, price hikes and government schemes at the 2026-27 Hosanagara Taluk Level Youth Parliament held at Government First Grade College, Ripponpete.
ರಿಪ್ಪನ್‌ಪೇಟೆ: ಪ್ರಜಾಪ್ರಭುತ್ವದ ನಿಜವಾದ ಶಕ್ತಿ ದೇಶದ ಸಂವಿಧಾನದಲ್ಲಿದೆ. ಪ್ರತಿಯೊಬ್ಬ ನಾಗರಿಕನ ಹಕ್ಕು, ಕರ್ತವ್ಯ ಹಾಗೂ ಗೌರವಯುತ ಬದುಕಿಗೆ ಸಂವಿಧಾನವೇ ಭದ್ರ ಬುನಾದಿಯಾಗಿದೆ. ಸಂವಿಧಾನದ ಚೌಕಟ್ಟಿನಲ್ಲಿ ಮುಕ್ತವಾಗಿ ಚರ್ಚೆ ನಡೆಸುವುದೇ ಪ್ರಜಾಪ್ರಭುತ್ವದ ನಿಜವಾದ ಆಶಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಬಿ.ಎಲ್. ರಾಜು ಹೇಳಿದರು.
2026-27ನೇ ಸಾಲಿನ ಹೊಸನಗರ ತಾಲ್ಲೂಕು ಮಟ್ಟದ ಯುವ ಸಂಸತ್ತು ಕಾರ್ಯಕ್ರಮವನ್ನು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಹೊಸನಗರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಆಶಯವಾದ ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಯುವಜನತೆ ಅರ್ಥಮಾಡಿಕೊಳ್ಳಬೇಕು. ಸರ್ಕಾರದ ತಪ್ಪುಗಳನ್ನು ನಿರ್ಭೀತಿಯಿಂದ ಪ್ರಶ್ನಿಸುವುದು ಪ್ರಜಾಪ್ರಭುತ್ವದ ಹಕ್ಕು. ಆದರೆ ಪರಸ್ಪರ ಗೌರವ ಮತ್ತು ವಿಶ್ವಾಸದೊಂದಿಗೆ ಚರ್ಚೆ ನಡೆಸುವುದು ಅಗತ್ಯ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸುವುದೇ ಇಂತಹ ಯುವ ಸಂಸತ್ತು ಕಾರ್ಯಕ್ರಮಗಳ ಪ್ರಮುಖ ಉದ್ದೇಶವಾಗಿದೆ ಎಂದರು.
ಕಾವೇರಿ ನೀರು ಹಂಚಿಕೆಯಿಂದ ನಿರುದ್ಯೋಗದವರೆಗೆ ಪ್ರತಿಪಕ್ಷದ ಪ್ರಶ್ನೆಗಳ ಸುರಿಮಳೆ!
ಯುವ ಸಂಸತ್ತಿನಲ್ಲಿ ವಿದ್ಯಾರ್ಥಿಗಳು ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ಪಾತ್ರ ನಿರ್ವಹಿಸುವ ಮೂಲಕ ರಾಜ್ಯದ ಪ್ರಮುಖ ಸಮಸ್ಯೆಗಳನ್ನು ಚರ್ಚಿಸಿದರು.
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಆಡಳಿತ ಪಕ್ಷ ವಿಫಲವಾಗಿದೆ. ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿಯಿದ್ದು, ನಿರುದ್ಯೋಗ ಸಮಸ್ಯೆ ತೀವ್ರವಾಗಿದೆ. ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು ಎಂದು ಪ್ರತಿಪಕ್ಷದ ಸದಸ್ಯರು ಪ್ರಶ್ನಿಸಿದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ಗ್ರಾಮೀಣ ಹೆಣ್ಣುಮಕ್ಕಳಿಗೆ ಜಾರಿಗೊಳಿಸಿದ್ದ ಸೈಕಲ್ ಯೋಜನೆಯನ್ನು ಮುಂದುವರಿಸದಿರುವ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದರು. ಸರ್ಕಾರಿ ಕಚೇರಿಗಳಲ್ಲಿನ ಭ್ರಷ್ಟಾಚಾರ, ಪಂಚ ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆ, ಹಾಲು, ಮೊಸರು, ಬೆಣ್ಣೆ, ತುಪ್ಪ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಬಸ್ ಪ್ರಯಾಣ ದರ ಹೆಚ್ಚಳದ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಯ ಪಾತ್ರ ನಿರ್ವಹಿಸಿದ ವಿದ್ಯಾರ್ಥಿ, ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದೆ. ಸಾರಿಗೆ ಇಲಾಖೆಯ ಆರ್ಥಿಕ ನಷ್ಟವನ್ನು ಸರಿದೂಗಿಸುವ ಉದ್ದೇಶದಿಂದ ಅನಿವಾರ್ಯವಾಗಿ ಬಸ್ ಪ್ರಯಾಣ ದರ ಹೆಚ್ಚಿಸಲಾಗಿದೆ ಎಂದು ಸಮರ್ಥಿಸಿಕೊಂಡರು.
ಇದರಿಂದ ತೃಪ್ತರಾಗದ ಪ್ರತಿಪಕ್ಷದ ಸದಸ್ಯರು, ಉಚಿತ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಕೇವಲ ಸ್ಟಿಂಗ್ ಆಪರೇಷನ್‌ಗಳ ಹೆಸರಿನಲ್ಲಿ ಕಾಲಹರಣ ಮಾಡಲಾಗುತ್ತಿದೆಯೇ ಹೊರತು ಜನಪರ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುತ್ತಿಲ್ಲ ಎಂದು ಟೀಕಿಸಿದರು.
ಮಳೆಯ ಕೊರತೆಯಿಂದ ರೈತರು ಬರಗಾಲದ ಸಂಕಷ್ಟ ಎದುರಿಸುತ್ತಿದ್ದು, ಬೆಳೆ ಕೈಗೆ ಸಿಗದೆ ಆರ್ಥಿಕ ತೊಂದರೆಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದು ಬಡ ಮತ್ತು ಮಧ್ಯಮ ವರ್ಗದ ಜನರ ಬದುಕಿನ ಮೇಲೆ ಮತ್ತಷ್ಟು ಹೊರೆ ಉಂಟುಮಾಡಿದೆ ಎಂದು ಪ್ರತಿಪಕ್ಷದ ಸದಸ್ಯರು ಸದನದಲ್ಲಿ ಸರ್ಕಾರದ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಎಂ. ಗೀತಾ, ಶಿಕ್ಷಣ ಇಲಾಖೆಯ ಸಮನ್ವಯ ಅಧಿಕಾರಿ ರಂಗನಾಥ್, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಮೇಲ್ವಿಚಾರಕ ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
