ಸಹಕಾರಿ ರತ್ನ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮೂವರು ಸಾಧಕರು ಆಯ್ಕೆ; H N ವಿದ್ಯಾಧರ್, ವಾಟಗೋಡು ಸುರೇಶ್ ಹಾಗೂ ಆರ್. ವಿಜಯಕುಮಾರ್‌ಗೆ ಗೌರವ | Three prominent cooperative leaders from Shivamogga district, Vidyadhar, Vatgodu Suresh and R. Vijay Kumar, have been selected for the Karnataka Government’s prestigious Sahakara Ratna Award.
ಸಹಕಾರ ಕ್ಷೇತ್ರದಲ್ಲಿ ಅನನ್ಯ ಸಾಧನೆ ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸಿದ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ಸಹಕಾರಿ ರತ್ನ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮೂವರು ಗಣ್ಯರು ಭಾಜನರಾಗಿದ್ದಾರೆ.
ಶಿಮೂಲ್ ಅಧ್ಯಕ್ಷ ವಿದ್ಯಾಧರ, ಹಿರಿಯ ಸಹಕಾರಿ ಧುರೀಣ ವಾಟಗೋಡು ಸುರೇಶ್ ಹಾಗೂ ಶಿವಮೊಗ್ಗ ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ, ಸಂತೆ ಕಡೂರಿನ ಆರ್. ವಿಜಯಕುಮಾರ್ (ಧನಿ) ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಹಕಾರ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ತೊಡಗಿಸಿಕೊಂಡು, ಸಹಕಾರಿ ಸಂಸ್ಥೆಗಳ ಅಭಿವೃದ್ಧಿ ಹಾಗೂ ಸಂಘಟನೆಯ ಬಲವರ್ಧನೆಗೆ ತಮ್ಮದೇ ಆದ ಕೊಡುಗೆ ನೀಡಿರುವ ಈ ಮೂವರು ಸಾಧಕರಿಗೆ ರಾಜ್ಯ ಸರ್ಕಾರದ ಪ್ರತಿಷ್ಠಿತ ಪ್ರಶಸ್ತಿ ಒಲಿದು ಬಂದಿರುವುದು ಜಿಲ್ಲೆಯ ಸಹಕಾರ ವಲಯದಲ್ಲಿ ಸಂತಸ ಮೂಡಿಸಿದೆ.
ಸಹಕಾರಿ ಕ್ಷೇತ್ರವನ್ನು ಕೇವಲ ವ್ಯವಹಾರದ ವೇದಿಕೆಯಾಗಿ ನೋಡದೆ, ಜನಸಾಮಾನ್ಯರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪೂರಕವಾದ ಸೇವಾ ಕ್ಷೇತ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಮೂವರು ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರ ಸಾಧನೆ ಮತ್ತು ಸೇವೆಯನ್ನು ಗುರುತಿಸಿ ಸಹಕಾರಿ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಜಿಲ್ಲೆಯ ಸಹಕಾರ ವಲಯದ ಮುಖಂಡರು, ಅಭಿಮಾನಿಗಳು ಹಾಗೂ ಹಿತೈಷಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಮೂವರು ಸಾಧಕರಿಗೆ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಹಾಗೂ ವಿವಿಧ ಸಹಕಾರಿ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಅಧ್ಯಕ್ಷರು ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಆರ್.ಎಂ. ಮಂಜುನಾಥ್ ಗೌಡ ಮತ್ತು ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ.ಎಂ. ಪರಮೇಶ್ ಅವರು ಸಹಕಾರಿ ರತ್ನ ಪ್ರಶಸ್ತಿಗೆ ಭಾಜನರಾದ ಮೂವರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಮೂವರು ಸಹಕಾರ ಕ್ಷೇತ್ರದ ಸಾಧಕರಿಗೆ ರಾಜ್ಯಮಟ್ಟದ ಗೌರವ ಲಭಿಸಿರುವುದು ಜಿಲ್ಲೆಯ ಹೆಮ್ಮೆಗೆ ಮತ್ತೊಂದು ಗರಿ ಮೂಡಿಸಿದಂತಾಗಿದೆ.
