ಹಾಲು, ಮೊಸರು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿಂಪಡೆಯಲು ಆಗ್ರಹ; ಹೊಸನಗರ ಜೆಡಿಎಸ್‌ನಿಂದ ಸಿಎಂಗೆ ಮನವಿ | Hosanagara JD(S) leaders submit a petition to the Karnataka Chief Minister demanding withdrawal of milk product and KSRTC bus fare hikes and control of essential commodity prices.
ರಿಪ್ಪನ್‌ಪೇಟೆ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರು, ರೈತರು ಹಾಗೂ ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಹಾಲು, ಮೊಸರು ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಳವನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಹೊಸನಗರ ತಾಲೂಕು ಜೆಡಿಎಸ್ ವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪಟ್ಟಣದ ನಾಡಕಛೇರಿಯಲ್ಲಿ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಜೆಡಿಎಸ್ ಮುಖಂಡರು, ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಗಳಿಂದ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತಂದರು.
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹಾಗೂ ಹೊಸನಗರ ತಾಲೂಕು ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್ ಅವರ ನೇತೃತ್ವದಲ್ಲಿ ನಾಡಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು.
ಹಾಲು ಮತ್ತು ಹಾಲಿನ ಉತ್ಪನ್ನಗಳಾದ ಮೊಸರು, ತುಪ್ಪ, ಬೆಣ್ಣೆ ಹಾಗೂ ಪನ್ನೀರ್ ಬೆಲೆಗಳನ್ನು 8ರಿಂದ 25 ರೂಪಾಯಿವರೆಗೆ ಹೆಚ್ಚಿಸಿರುವುದನ್ನು ತಕ್ಷಣ ಹಿಂಪಡೆಯಬೇಕು. ಕೆಎಸ್‌ಆರ್‌ಟಿಸಿ ಸೇರಿದಂತೆ ಇತರ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ಬರಪೀಡಿತ ರೈತರು, ಗ್ರಾಮೀಣ ಕುಟುಂಬಗಳು ಹಾಗೂ ಜನಸಾಮಾನ್ಯರಿಗೆ ವಿಶೇಷ ಪರಿಹಾರ ಕ್ರಮಗಳನ್ನು ಘೋಷಿಸಬೇಕು. ಬರಪೀಡಿತ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಹಾಗೂ ಅಗತ್ಯ ನೀರಿನ ಲಭ್ಯತೆಯನ್ನು ಖಚಿತಪಡಿಸಬೇಕು. ಅಕ್ಕಿ, ಸಕ್ಕರೆ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದಲ್ಲದೆ, ಬಡವರು, ಕೆಳವರ್ಗ ಹಾಗೂ ಮಧ್ಯಮ ವರ್ಗದ ಜನರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಬೆಲೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಬೇಕು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟರು.
ರಾಜ್ಯ ಸರ್ಕಾರ ಜನಸಾಮಾನ್ಯರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಜನರ ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ತಕ್ಷಣ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜೆಡಿಎಸ್ ಮುಖಂಡರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷರಾದ ಜಿ.ಎಸ್. ವರದರಾಜ್, ಹರೀಶ್ ಹಾಲುಗುಡ್ಡೆ, ಆಲುವಳ್ಳಿ ಮಲ್ಲೇಶ್, ನಟರಾಜ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
