w
Headlines
Home » ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ಜಾರಿ: ಕೆಪಿಎಸ್ ಶಾಲೆಗಳಿಗೆ ಉಚಿತ ಬಸ್ ಸೌಲಭ್ಯ – ಸಚಿವ ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ಜಾರಿ: ಕೆಪಿಎಸ್ ಶಾಲೆಗಳಿಗೆ ಉಚಿತ ಬಸ್ ಸೌಲಭ್ಯ – ಸಚಿವ ಮಧು ಬಂಗಾರಪ್ಪ

IMG 20261117 WA0038

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ಜಾರಿ: ಕೆಪಿಎಸ್ ಶಾಲೆಗಳಿಗೆ ಉಚಿತ ಬಸ್ ಸೌಲಭ್ಯ – ಸಚಿವ ಮಧು ಬಂಗಾರಪ್ಪ | Karnataka Minister S. Madhu Bangarappa announces bilingual education in all government schools from next academic year, free bus facilities for 1,600 KPS schools and updates on Sharavathi rehabilitation and Shivamogga airport development.

ಶಿವಮೊಗ್ಗ, ನ.17: ರಾಜ್ಯದ ಸರ್ಕಾರಿ ಶಾಲೆಗಳನ್ನು ಬಲವರ್ಧನೆಗೊಳಿಸಿ ಖಾಸಗಿ ಶಾಲೆಗಳೊಂದಿಗೆ ಸ್ಪರ್ಧಾತ್ಮಕವಾಗಿ ರೂಪಿಸುವ ಉದ್ದೇಶದಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್ ಮಾಧ್ಯಮವನ್ನು ಒಳಗೊಂಡ ದ್ವಿಭಾಷಾ ಶಿಕ್ಷಣ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಂಗಳವಾರ ಶಿವಮೊಗ್ಗದಲ್ಲಿ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯ ಸುಧಾರಣೆಗಳು, ಕರ್ನಾಟಕ ಪಬ್ಲಿಕ್ ಶಾಲೆಗಳ ಉನ್ನತೀಕರಣ, ಶಿಕ್ಷಕರ ನೇಮಕಾತಿ ಸೇರಿದಂತೆ ಜಿಲ್ಲೆಯ ಪ್ರಮುಖ ಅಭಿವೃದ್ಧಿ ಹಾಗೂ ಭೂಹಕ್ಕು ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.

1,600 ಕೆಪಿಎಸ್ ಶಾಲೆಗಳಿಗೆ ಬಸ್ ಸೌಲಭ್ಯ

ರಾಜ್ಯದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಉನ್ನತೀಕರಿಸಲು ಸರ್ಕಾರ ವಿಶೇಷ ಯೋಜನೆ ರೂಪಿಸಿದೆ. ಈ ಯೋಜನೆಗೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಮೂಲಕ ₹2,500 ಕೋಟಿ ಅನುದಾನ ಲಭ್ಯವಾಗಲಿದ್ದು, ಸರ್ಕಾರವೂ ಪ್ರತಿ ಶಾಲೆಗೆ ಸರಾಸರಿ ₹2 ಕೋಟಿಯಿಂದ ₹4 ಕೋಟಿ ವೆಚ್ಚ ಮಾಡಲಿದೆ ಎಂದು ತಿಳಿಸಿದರು.

ಈಗಾಗಲೇ ಕೆಪಿಎಸ್ ಶಾಲೆಗಳ ವಿಸ್ತರಣೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದೆ. ಶಾಲೆಗಳಲ್ಲಿ ಸುಸಜ್ಜಿತ ಕಟ್ಟಡಗಳು, ಸ್ಮಾರ್ಟ್ ಕ್ಲಾಸ್‌ಗಳು, ವಿಜ್ಞಾನ ಮತ್ತು ಕಂಪ್ಯೂಟರ್ ಪ್ರಯೋಗಾಲಯಗಳು, ಗ್ರಂಥಾಲಯ, ಶುದ್ಧ ಕುಡಿಯುವ ನೀರು ಹಾಗೂ ಉತ್ತಮ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುವುದು.

ಮುಂಬರುವ ಜೂನ್ ತಿಂಗಳಿನಿಂದ ರಾಜ್ಯದ ಎಲ್ಲಾ 1,600 ಕೆಪಿಎಸ್ ಶಾಲೆಗಳ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆಯಡಿ ಬಸ್ ಸೌಲಭ್ಯ ಒದಗಿಸಲಾಗುವುದು. ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಸಿಇಟಿ ಪರೀಕ್ಷೆಯ ದಿನಾಂಕವನ್ನೂ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಸಚಿವರು ಹೇಳಿದರು.

ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದ್ದು, ಮುಂದಿನ 10 ದಿನಗಳಲ್ಲಿ ಸುಪ್ರೀಂ ಕೋರ್ಟ್‌ಗೆ ಅಧಿಕೃತ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಅರಣ್ಯ ಹಕ್ಕು ಕಾಯ್ದೆಯಡಿ ಸಾಮಾನ್ಯ ವರ್ಗದವರು 75 ವರ್ಷ ಹಾಗೂ ಪರಿಶಿಷ್ಟ ಪಂಗಡದವರು 5 ವರ್ಷ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಿರಬೇಕೆಂಬ ನಿಯಮವಿದೆ. ಈ ಸಂಬಂಧ ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಜಂಟಿಯಾಗಿ ಸರ್ವೆ ನಡೆಸಿ, ಗ್ರಾಮಸಭೆಗಳ ಮೂಲಕ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಶಿವಮೊಗ್ಗ, ಕಾರವಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಸಮಸ್ಯೆ ಇದೆ ಎಂದರು.

ಹಿಂದಿನ ಸರ್ಕಾರ ಬಗರ್‌ಹುಕುಂ ಸಾಗುವಳಿದಾರರ ಅರ್ಜಿಗಳನ್ನು ತಿರಸ್ಕರಿಸಿತ್ತು. ಆದರೆ, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಮರುಸರ್ವೆ ನಡೆಸಿ ಅರ್ಹ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನಗಳ ಇಳಿಯುವಿಕೆ ಮತ್ತು ಹಾರಾಟಕ್ಕೆ ಅನುಕೂಲವಾಗುವ ನೈಟ್ ಲ್ಯಾಂಡಿಂಗ್ ಕಾಮಗಾರಿಗಾಗಿ ರಾಜ್ಯ ಸರ್ಕಾರ ₹23 ಕೋಟಿ ವೆಚ್ಚ ಮಾಡುತ್ತಿದೆ. ಕಾಮಗಾರಿ ಈಗಾಗಲೇ ಶೇ.90ರಷ್ಟು ಪೂರ್ಣಗೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.

ಇದರೊಂದಿಗೆ ಉಡಾನ್ ಯೋಜನೆಯಡಿ ಹೆಚ್ಚಿನ ವಿಮಾನಗಳ ಹಾರಾಟಕ್ಕೆ ಅವಕಾಶ ಕಲ್ಪಿಸುವುದು ಹಾಗೂ ವಿಮಾನಯಾನ ತರಬೇತಿ ಕೇಂದ್ರ ಆರಂಭಿಸುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್, ಸೂಡಾ ಅಧ್ಯಕ್ಷ ಮಧುಸೂದನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಸ್.ಟಿ. ಹಾಲಪ್ಪ, ಮುಖಂಡರಾದ ಸೊರಬದ ದೇವರಾಜ್, ಕಲಗೋಡು ರತ್ನಾಕರ್, ದೇವಿಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.