ಕನ್ನಡ ಭಾಷೆಯ ಬೆಳವಣಿಗೆಗೆ ಪ್ರತಿಯೊಬ್ಬ ಕನ್ನಡಿಗರೂ ಕೈಜೋಡಿಸಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ | MLA B. Gopalakrishna calls on Kannadigas to preserve and promote Kannada language, culture and heritage at the 70th Kannada Rajyotsava celebration in Doona village, Ripponpete.
ರಿಪ್ಪನ್‌ಪೇಟೆ: ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಸಂಸ್ಕೃತಿಯನ್ನು ನಾಡಿನ ಪ್ರತಿಯೊಬ್ಬರೂ ಪ್ರೀತಿಸಿ ಬೆಳೆಸಿದಾಗ ಮಾತ್ರ ಕನ್ನಡ ಭಾಷೆ ವಿಶ್ವಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯ. ಕನ್ನಡ ಕಟ್ಟುವ ಕೆಲಸ ಎಲ್ಲರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಿಧಾನಸಭೆಯ ಮುಖ್ಯ ಸಚೇತಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ಭಾನುವಾರ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೂನ ಗ್ರಾಮದ ವೃತ್ತದಲ್ಲಿ ಮಲೆನಾಡ ಕನ್ನಡಿಗರ ಸೇನೆ ಆಯೋಜಿಸಿದ್ದ 70ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬ ಕನ್ನಡಿಗರೂ ಕನ್ನಡ ಭಾಷೆ, ನಾಡು, ನುಡಿ, ನೆಲ ಮತ್ತು ಜಲದ ರಕ್ಷಣೆಗೆ ಮುಂದಾಗಬೇಕು. ಭಾಷೆಗೆ ಗೌರವ ನೀಡಿದಾಗ ಅದರ ಬೆಳವಣಿಗೆ ಸಾಧ್ಯವಾಗುತ್ತದೆ. ಕನ್ನಡದ ಭಾಷಾ ಸಾಮರ್ಥ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮೂಲಕ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿಯನ್ನು ಪಸರಿಸಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಗಣೇಶೋತ್ಸವ ಸೇರಿದಂತೆ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಿಗೆ ತಾವು ನೀಡುತ್ತಿರುವ ದೇಣಿಗೆಗಳ ಕುರಿತು ಮಾತನಾಡಿದ ಅವರು, ಯುವಕರು ಅದ್ದೂರಿಯಾಗಿ ಗಣೇಶೋತ್ಸವ ಆಚರಿಸಲು ನೆರವು ನೀಡಿದರೂ ಕೆಲವರು ಟೀಕೆ ಮಾಡುತ್ತಾರೆ. ಹೀಗಾಗಿ ಮುಂದಿನ ವರ್ಷದಿಂದ ಚೆಕ್ ಮೂಲಕ ದೇಣಿಗೆ ನೀಡುತ್ತೇನೆ ಎಂದರು.
ನಾನು ಅಧಿಕಾರದಲ್ಲಿದ್ದಾಗಲೂ, ಇಲ್ಲದಿದ್ದಾಗಲೂ ಕ್ರೀಡೆ, ಗಣೇಶೋತ್ಸವ ಹಾಗೂ ಆರೋಗ್ಯ ಸಮಸ್ಯೆಗಳಿಗೆ ನೆರವು ನೀಡುತ್ತಾ ಬಂದಿದ್ದೇನೆ. ಇಂತಹ ಸಮಾಜಮುಖಿ ಕಾರ್ಯಗಳಿಗೆ ಯಾರಿಗೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ದೂನ ಗ್ರಾಮದ ಅಭಿವೃದ್ಧಿ ಕುರಿತು ಮಾತನಾಡಿದ ಶಾಸಕರು, ಈಗಾಗಲೇ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸ್ಥಳೀಯರ ಬೇಡಿಕೆಯಂತೆ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಮಾತನಾಡಿ, ರಾಜ್ಯದ 224 ಶಾಸಕರ ಪೈಕಿ ಬೇಳೂರು ಗೋಪಾಲಕೃಷ್ಣ ಅವರು ದಾನ-ಧರ್ಮದ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಗಣೇಶೋತ್ಸವದ ಸಂದರ್ಭದಲ್ಲಿ 700ಕ್ಕೂ ಹೆಚ್ಚು ಗಣೇಶೋತ್ಸವ ಸಂಘಗಳಿಗೆ ದೇಣಿಗೆ ನೀಡಿದ್ದಾರೆ. ಅವರ ಈ ಕಾರ್ಯವನ್ನು ಮೆಚ್ಚಬೇಕು. ಯಾವುದೇ ನೆರವು ನೀಡದೆ ಟೀಕೆ ಮಾಡುವವರ ಬಗ್ಗೆ ಜನರೇ ಮುಂದಿನ ಚುನಾವಣೆಯಲ್ಲಿ ಉತ್ತರಿಸಲಿದ್ದಾರೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ದೂನ ಗ್ರಾಮದ ಯುವಕರು ಕನ್ನಡ ಸಂಘಟನೆಯ ಮೂಲಕ ನಡೆಸುತ್ತಿರುವ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲೆನಾಡ ಕನ್ನಡಿಗರ ಸೇನೆಯ ಅಧ್ಯಕ್ಷ ಚಿರಂತ್ ಭಂಡಾರಿ ವಹಿಸಿದ್ದರು.
ಸಮಾರಂಭದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಈಶ್ವರಪ್ಪ ಗೌಡ, ಮಧುಸೂಧನ್, ಆಸೀಫ್ ಭಾಷಾ, ನಿರೂಪ್ ಕುಮಾರ್, ರವೀಂದ್ರ ಕೆರೆಹಳ್ಳಿ, ನಾಗಪ್ಪ ಉಂಡುಗೋಡು, ಗಣಪತಿ ಗವಟೂರು, ಬಾಲರಾಜ್ ದೂನ, ಶಿವಾಜಿ ರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
