ಸಾಗರ ಎಸಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ: ₹5 ಲಕ್ಷ ಲಂಚಕ್ಕೆ ಬೇಡಿಕೆ, ಫೋನ್ಪೇ ಮೂಲಕ ಹಣ ಪಡೆದ ಎಫ್ಡಿಎ ವಶಕ್ಕೆ! | Lokayukta officials in Sagar caught FDA D.V. Gururayacharya following a complaint of demanding ₹5 lakh bribe and receiving ₹2,100 through PhonePe for providing a court order copy.
ಸಾಗರ: ಉಪವಿಭಾಗಾಧಿಕಾರಿ ನ್ಯಾಯಾಲಯದ ಆದೇಶದ ಪ್ರತಿ ನೀಡಲು ₹5 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ ಫೋನ್ಪೇ ಮೂಲಕ ₹2,100 ಹಣ ಪಡೆದಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸಾಗರ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿ.ವಿ. ಗುರುರಾಯಾಚಾರ್ಯ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿ.
ಮೈಸೂರು ಮೂಲದ ಅನಿತಾ ಜಿ. ಎಂಬುವವರು ನ್ಯಾಯಾಲಯದ ಆದೇಶದ ಪ್ರತಿಯನ್ನು ಪಡೆಯಲು ಕಚೇರಿಗೆ ತೆರಳಿದ್ದ ಸಂದರ್ಭದಲ್ಲಿ, ಆದೇಶದ ಪ್ರತಿ ನೀಡಲು ಗುರುರಾಯಾಚಾರ್ಯ ಅವರು ₹5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅಲ್ಲದೆ, ಮುಂಗಡವಾಗಿ ₹2,100 ಹಣವನ್ನು ಫೋನ್ಪೇ ಮೂಲಕ ಪಡೆದುಕೊಂಡಿದ್ದರು.
ಈ ಕುರಿತು ಅನಿತಾ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದ ತಂಡ ಸಾಗರ ಉಪವಿಭಾಗಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಿ, ಎಫ್ಡಿಎ ಗುರುರಾಯಾಚಾರ್ಯ ಅವರನ್ನು ವಶಕ್ಕೆ ಪಡೆದುಕೊಂಡಿದೆ.
ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
