ಕೆಂಚನಾಲ ತಾ.ಪಂ. ಕ್ಷೇತ್ರದ ಅಖಾಡಕ್ಕೆ ಎಂಟ್ರಿ ಕೊಟ್ಟ ಯುವ ನಾಯಕ ಎನ್. ವಿನಯ್ ಬಾಳೂರು: ಬಿಜೆಪಿ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿ! | Vinay Baluru emerges as a BJP ticket aspirant for the Kenchanala Taluk Panchayat constituency following the revised reservation announcement of BC-B category.
ರಿಪ್ಪನ್‌ಪೇಟೆ: ಕೆಂಚನಾಲ ತಾಲೂಕು ಪಂಚಾಯಿತಿ ಕ್ಷೇತ್ರದ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ಈ ನಡುವೆ ಬಾಳೂರು ಗ್ರಾಮದ ಯುವ ನಾಯಕ ಎನ್. ವಿನಯ್ ಬಾಳೂರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಆಸಕ್ತಿ ತೋರಿದ್ದು, ಸ್ಥಳೀಯ ರಾಜಕೀಯ ವಲಯದಲ್ಲಿ ಗಮನ ಸೆಳೆಯುತ್ತಿದ್ದಾರೆ.
ಬಾಳೂರು ಗ್ರಾಮ ಪಂಚಾಯಿತಿ ಹಾಗೂ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಒಳಗೊಂಡು ಒಂದು ತಾಲೂಕು ಪಂಚಾಯಿತಿ ಕ್ಷೇತ್ರ ರಚಿಸಲಾಗಿದೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ಕೆಂಚನಾಲ ಪಂಚಾಯಿತಿ ವ್ಯಾಪ್ತಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿತ್ತು. ಹೀಗಾಗಿ ಈ ಬಾರಿ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಆಕಾಂಕ್ಷಿಗಳಿಗೂ ಟಿಕೆಟ್ ನೀಡುವ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕೆಂಬ ಬೇಡಿಕೆ ಪಕ್ಷದ ನಾಯಕರ ಮುಂದೆ ಕೇಳಿಬಂದಿದೆ.
ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಜೆಪಿ ಪಕ್ಷಕ್ಕೆ ಉತ್ತಮ ಬೆಂಬಲವಿದೆ ಎಂಬುದು ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ. ಈ ಹಿನ್ನೆಲೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಬಾಳೂರು ವ್ಯಾಪ್ತಿಯ ಆಕಾಂಕ್ಷಿಗಳಿಗೆ ಆದ್ಯತೆ ನೀಡಬೇಕೆಂಬ ಒತ್ತಾಯವೂ ಪಕ್ಷದ ವಲಯದಲ್ಲಿ ವ್ಯಕ್ತವಾಗುತ್ತಿದೆ.
ಈ ಬೆಳವಣಿಗೆಗಳ ನಡುವೆ ಕೆಂಚನಾಲ ತಾಲೂಕು ಪಂಚಾಯಿತಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿ ಯುವ ನಾಯಕ ಎನ್. ವಿನಯ್ ಬಾಳೂರು ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ.
ಬಿಜೆಪಿ ಪಕ್ಷದ ಯುವ ಮೋರ್ಚಾ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿರುವ ವಿನಯ್ ಬಾಳೂರು, ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ, ಸ್ಥಳೀಯವಾಗಿ ವಿದ್ಯುತ್ ಸಮಸ್ಯೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸುವ ಮೂಲಕ ಸಾರ್ವಜನಿಕರೊಂದಿಗೆ ಸಂಪರ್ಕ ಹೊಂದಿದ್ದಾರೆ. ಜಿಲ್ಲಾ ಮಟ್ಟದ ಬಿಜೆಪಿ ಮುಖಂಡರೊಂದಿಗೂ ನೇರ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.
ಆರಂಭದಲ್ಲಿ ಕೆಂಚನಾಲ ತಾಲೂಕು ಪಂಚಾಯಿತಿ ಕ್ಷೇತ್ರದ ಮೀಸಲಾತಿ ಸಾಮಾನ್ಯ ವರ್ಗಕ್ಕೆ ಪ್ರಕಟವಾದಾಗಲೇ ವಿನಯ್ ಅವರು ಬಿಜೆಪಿ ಟಿಕೆಟ್‌ಗಾಗಿ ಆಕಾಂಕ್ಷೆ ವ್ಯಕ್ತಪಡಿಸಿದ್ದರು. ಇದೀಗ ಮೀಸಲಾತಿ ಬದಲಾವಣೆಯಾಗಿ ಬಿಸಿಎಂ (ಬಿ) ವರ್ಗಕ್ಕೆ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಟಿಕೆಟ್‌ಗಾಗಿ ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ.
ಒಟ್ಟಾರೆ, ಕೆಂಚನಾಲ ತಾಲೂಕು ಪಂಚಾಯಿತಿ ಕ್ಷೇತ್ರದಲ್ಲಿ ಈ ಬಾರಿ ಬಾಳೂರು ಪಂಚಾಯಿತಿ ವ್ಯಾಪ್ತಿಯ ಆಕಾಂಕ್ಷಿಗಳಿಗೆ ಅವಕಾಶ ಸಿಗುತ್ತದೆಯೇ? ಯುವ ನಾಯಕ ಎನ್. ವಿನಯ್ ಬಾಳೂರು ಅವರಿಗೆ ಬಿಜೆಪಿ ವರಿಷ್ಠರು ಮಣೆ ಹಾಕುತ್ತಾರೆಯೇ? ಎಂಬ ಕುತೂಹಲ ಸ್ಥಳೀಯ ರಾಜಕೀಯ ವಲಯದಲ್ಲಿ ಮೂಡಿದೆ. ಅಂತಿಮವಾಗಿ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
