ಶಿವಮೊಗ್ಗ: ಪುರದಾಳ್ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರತಿಭಾ ಪುರಸ್ಕಾರ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,
ಗ್ರಾಮ ಪಂಚಾಯಿತಿ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2021-22ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಶೇಕಡಾ 90ಕ್ಕಿಂತ ಹೆಚ್ಚಿನ ಅಂಕ ಪಡೆದ ಮತ್ತು ಕ್ರೀಡೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಲಾಯಿತು.ಮತ್ತು ಪುರದಾಳು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕ ಬಾಂಧವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಗ್ರಾಮ ಪಂಚಾಯಿತಿ ಅನುದಾನದಲ್ಲಿ ಪಂಚಾಯಿತಿಯಿಂದ ಆಯ್ಕೆ ಮಾಡಲಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮಾಡಲಾಯಿತು .ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ಅವಶ್ಯವಿರುವ ತರಗತಿ ಪುಸ್ತಕಗಳನ್ನು ಮತ್ತು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು,
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರದೀಪ್ ಎಸ್ ಹೆಬ್ಬೂರ್ ಮಾತನಾಡಿ ಪುರದಾಳು ಗ್ರಾಮ ಪಂಚಾಯಿತಿಯಿಂದ ಹಲವಾರು ಉತ್ತಮ ಕೆಲಸಗಾರರು ಕಾರ್ಯಗಳ ನೆರವೇರಿಸುತ್ತಿದ್ದು ಪಾರದರ್ಶಕ ಆಡಳಿತವನ್ನು ನೀಡುತ್ತಿರುವುದಲ್ಲದೆ ಈ ದಿನ ವಿಶೇಷವಾಗಿ ಪಂಚಾಯಿತಿ ವ್ಯಾಪ್ತಿಯ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಅಭಿನಂದನೆ ಸಲ್ಲಿಸುತ್ತಿರುವುದರಿಂದ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡಲು ವಿದ್ಯಾರ್ಥಿಗಳಿಗೆ ಉತ್ತೇಜನವಾಗುತ್ತದೆ .ಅದರ ಜೊತೆಗೆ ಸಮಾಜವನ್ನು ಸರಿದಾರಿಯಲ್ಲಿ ನಡೆಸುವ ನಿಟ್ಟಿನಲ್ಲಿ ಶಿಕ್ಷಕರು ಬಹಳ ಪ್ರಮುಖ ಪಾತ್ರ ವಹಿಸಲಿದ್ದು ಶಿಕ್ಷಣದಷ್ಟೇ ಶಿಕ್ಷಕರ ಪಾತ್ರವೂ ಅದ್ವಿತೀಯವಾದದ್ದು ಮಕ್ಕಳು ಅತಿ ಹೆಚ್ಚಿನ ಅಂಕವನ್ನು ಗಳಿಸುವುದರ ಜತೆಗೆ ಅವರಿಗೆ ನೈತಿಕ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದಲ್ಲಿ ನಡೆಯುವಂತೆ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಮತ್ತು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಿಕ್ಷಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು ಅವರನ್ನು ಗುರುತಿಸಿ ಈ ದಿನ ಸನ್ಮಾನಿಸುತ್ತಿರುವುದು ನಮ್ಮ ಭಾಗ್ಯವೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ನಾಗರಾಜ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಎಸ್ ಆರ್ ಗಿರೀಶ್ ಮತ್ತು ಗ್ರಾಮ ಪಂಚಾಯಿತಿಯ ಸದಸ್ಯರಾದ ಜಿ ಮಾನಸ ,ಕುಸುಮಾ ,ರಾಮಣ್ಣ ,ಲಕ್ಷ್ಮೀಬಾಯಿ ,ನಾಗವೇಣಿ ,ಕಮಲಾಕ್ಷಿ ,ಗ್ರಾಪಂ ಪಿಡಿಒ ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ,ಶಾಲಾ ಶಿಕ್ಷಕರು , ಹಳೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.