ಶಿವಮೊಗ್ಗ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಘಟನೆ ಸಂಭವಿಸಿದೆ. ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ರೈಲಿಗೆ ಸಿಲುಕಿದ ಇವರಿಬ್ಬರು ಸಾವನ್ನಪ್ಪಿದ್ದಾರೆ.
ಭಾನುವಾರ ರಾತ್ರಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಘಟನೆ ನಡೆದಿದೆ. ಮೋಹನ್ ಪ್ರಸಾದ್ (70) ಮತ್ತು ಅಮರನಾಥ್ (30) ಮೃತರು. ತಂದೆ ಮತ್ತು ಮಗ ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ ತೆರಳಬೇಕಿತ್ತು. ನಿಲ್ದಾಣಕ್ಕೆ ಬಂದಾಗ ರೈಲು ಹೊರಟಿತ್ತು. ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಮಗ ಅಮರನಾಥ್ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಆತನ ರಕ್ಷಣೆಗೆ ಧಾವಿಸಿದ ಮೋಹನ್ ಪ್ರಸಾದ್ ಅವರು ರೈಲಿನ ಅಡಿಗೆ ಸಿಲುಕಿದ್ದಾರೆ.
ಅಮರನಾಥ್ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೋಹನ್ ಪ್ರಸಾದ್ ಅವರಿಗೂ ಗಂಭೀರ ಗಾಯವಾಗಿತ್ತು. ಕೂಡಲೇ ಅವರಿಗೆ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಮುಂದಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಮೋಹನ್ ಪ್ರಸಾದ್ ಅವರು ವಿಐಎಸ್ಎಲ್ ನಿವೃತ್ತ ನೌಕರರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಭದ್ರಾವತಿಯಲ್ಲಿರುವ ಮಗನ ಮನೆಗೆ ಬಂದಿದ್ದರು.
ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್