ರಿಪ್ಪನ್‌ಪೇಟೆ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿಯಲ್ಲಿ ಶುಕ್ರವಾರ ಬೆಳ್ಳೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರವರು ಕಾರ್ಯಕ್ರಮ ಉದ್ಘಾಟಿಸಿ ನಾಗರಿಕರಿಂದ ಮನವಿ ಸ್ವೀಕರಿಸಿ ಅಹವಾಲುಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಬಕಾರಿ ,ಕೃಷಿ ,ಅರಣ್ಯ ,ಕಂದಾಯ ಇಲಾಖೆಗೆ ಸಂಬಂಧಪಟ್ಟ ದೂರುಗಳು ಅಧಿಕವಾಗಿದ್ದವು. ಸಂಧ್ಯಾ ಸುರಕ್ಷಾ, ಅಂಗವಿಕಲ, ವಿಧವಾ ವೇತನ ಇವುಗಳಿಗೆ ಸಂಬಂಧಪಟ್ಟಂತೆ ಸ್ಥಳದಲ್ಲಿ ಮಂಜೂರಾತಿ ಆದೇಶ ನೀಡಿದರು.
ಗ್ರಾಮೀಣ ಪ್ರದೇಶದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಅವ್ಯಾಹತವಾಗಿ ನಡೆಯುತ್ತಿರುವ ಮದ್ಯ ಮಾರಾಟದ ಬಗ್ಗೆ ಸಾರ್ವಜನಿಕರು ಗಂಭೀರವಾಗಿ ಆರೋಪಿಸಿದರು. ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಅಬಕಾರಿ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.
ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಕುಟುಂಬಗಳೇ ಅಧಿಕವಾಗಿದ್ದು ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಈ ಸಭೆಯಲ್ಲಿ ಉಪವಿಭಾಗಾಧಿಕಾರಿ ನಾಗರಾಜ್, ತಹಶೀಲ್ದಾರ್ ರಾಜೀವ್, ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಗ್ರಾಪಂ ಅಧ್ಯಕ್ಷೆ ಭವಾನಿ ದಿವಾಕರ್, ಉಪಾಧ್ಯಕ್ಷ ಬುಕ್ಕಿ ವರೆ ರಾಜೇಶ್, ಗ್ರಾಪಂ ಸದಸ್ಯರುಗಳು ಹಾಗೂ ಎಲ್ಲ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.