ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್‌ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ ಆದರೂ ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು ಪ್ರಾಥಮಿಕ ಹಂತದಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸರಕಾರ ಅನೇಕ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಿದೆ, ಸರಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣವನ್ನು ನೀಡುವುದರ ಜೊತೆಗೆ ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ,ಹಾಲು, ಶೇಂಗಾ ಮಿಠಾಯಿ, ಶೂ, ಜೊತೆಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೂ ಸಹ ಪ್ರೋತ್ಸಾಹವನ್ನು ನೀಡುತ್ತಿದೆ,ಬಾಲ್ಯದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯಕ್ಕೆ ಬುನಾದಿ ಕಟ್ಟಿಕೊಡಬೇಕು ಎಂದರು.
ಖಾಸಗಿ ಶಾಲೆಗಳ ವ್ಯಾಮೋಹವನ್ನು ಬಿಟ್ಟು, ಸರ್ಕಾರಿ ಶಾಲೆಗಳ ಕಡೆ ಮುಖ ಮಾಡುವ ಮೂಲಕ,ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಪೂರಕವಾದ ಯೋಜನೆಯ ಅನುಷ್ಠಾನದ ಪ್ರಯೋಜನ ಪಡೆದುಕೊಳ್ಳುವಂತೆ ಕಿವಿಮಾತು ಹೇಳಿದರು.
ಇದೇ ಸಂಧರ್ಭದಲ್ಲಿ ಶಾಸಕರು ಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಧ್ವಜಸ್ಥಂಭವನ್ನು ಉದ್ಘಾಟಿಸಿದರು.
ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಮಾತನಾಡಿ ಅವರು ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅದರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳುವುದರ ಮೂಲಕ ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಉದ್ಯೋಗವನ್ನು ಅಲಂಕರಿಸಿ ಸಮಾಜದ ಮುಖ್ಯ ವಾಹಿನಿಗೆ ಬರಲು ಪ್ರಯತ್ನಿಸಬೇಕಾಗಿದೆ ಎಂದರು.
ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರು ಇತ್ತೀಚಿನ ದಿನಗಳಲ್ಲಿ ನಿರಾಸಕ್ತಿ ಹೊಂದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳು ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿ ಕಾರ್ಯ ನಿರ್ವಹಿಸುತಿದ್ದಾರೆ.ಅವರಲ್ಲಿರುವ ಕೌಶಲ್ಯ ,ಪ್ರತಿಭೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಹಾಗೇಯೆ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಶಿಕ್ಷಣ ನೀಡುತಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಲು ಪೋಷಕರಲ್ಲಿ ಹಿಂಜರಿಕೆ ಬೇಡ ಹಾಗೇಯೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿದ್ದು ಅವರುಗಳಿಗೆ ಉತ್ತಮ ಅವಕಾಶ ಕಲ್ಪಿಸಿ ಕೊಟ್ಟರೆ ಅವರು ದೇಶದ ಉತ್ತಮ ಪ್ರಜೆಯಾಗಿ ರೂಪುಗೊಳ್ಳುತ್ತಾರೆ ಎಂದರು.
ಶಾಸಕ ಬೇಳೂರು ಗೋಪಾಲಕೃಷ್ಣರವರಿಗೆ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವರ್ಗದವರು ಗೌರವಿಸಿ ಅಭಿನಂದಿಸಿ ಸನ್ಮಾನಿಸಿದರು.
ಈ ಸಂಧರ್ಭದಲ್ಲಿ ಶಾಲೆಯ ಅಭಿವೃದ್ದಿಗೆ ಸಹಕರಿಸಿದ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಎಸ್.ಡಿ.ಎಂ.ಸಿ.ಆಧ್ಯಕ್ಷ ಗಣಪತಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಆತಿಥಿಗಳಾಗಿ ತಹಶೀಲ್ದಾರ್ ರಶ್ಮಿ ಹಾಲೇಶಪ್ಪ, ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲಾ ಷರೀಫ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ, ಸರ್ಕಾರಿ ನೌಕರ ಸಂಘದ ತಾಲ್ಲೂಕು ಅಧ್ಯಕ್ಷ ಸೋಮಶೇಖರ ಬಂಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಆರ್.ಸುರೇಶ್, ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ, ದಾನೇಶಪ್ಪ, ದಿವಾಕರ್, ಕೃಷ್ಣೋಜಿರಾವ್, ನಾಗೇಶ, ಪುಟ್ಟಸ್ವಾಮಿ, ಗಣೇಶ್ ಇನ್ನಿತರರು ಭಾಗವಹಿಸಿದ್ದರು.
ಹೆಚ್.ಪಿ.ರಂಜಿತಾ ಸ್ವಾಗತಿಸಿದರು. ಮುಖ್ಯಶಿಕ್ಷಕ ಜಗದೀಶ ಕಾಗಿನಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುವಾಣಿ ವಾರ್ಷಿಕ ವರದಿ ವಾಚನ ಮಾಡಿದರು. ಸಹಶಿಕ್ಷಕಿ ಬಿ.ತಾಜನ್ ನಿರೂಪಿಸಿದರು.

