ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ : ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್ಪೇಟೆ : ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದ್ದು,ಬಾಲ್ಯದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣವು ಅವರ ಶೈಕ್ಷಣಿಕ ಜೀವನದಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ ಇದಕ್ಕೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿದೆ ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ಪಟ್ಟಣದ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ನೇರಲ ಮನೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಶನಿವಾರ ಸಂಜೆ ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಯಾವುದೇ ಪ್ರತಿಷ್ಟಿತ ಖಾಸಗಿ ಶಾಲೆಗಳಿಗಿಂತಲೂ ಅತ್ಯುತ್ತಮ ಶೈಕ್ಷಣಿಕ ಚಟುವಟಿಕೆಗಳು ನಡೆಯುತ್ತಿದ್ದು ಅದರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳುವುದರ ಮೂಲಕ ಉತ್ತಮ ಶಿಕ್ಷಣವನ್ನು ಪಡೆದು ಉನ್ನತ ಉದ್ಯೋಗವನ್ನು ಅಲಂಕರಿಸಿ ಸಮಾಜದ ಮುಖ್ಯ ವಾಹಿನಿಗೆ ಬರಲು ಪೋಷಕರು ಹಾಗೂ ಶಿಕ್ಷಕರ ಪ್ರೇರಣೆ ಹಾಗೂ ಸಹಕಾರ ಅಗತ್ಯವಾಗಿದೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳು ಮೆರಿಟ್ ಆಧಾರದ ಮೇಲೆ ಆಯ್ಕೆಯಾಗಿ ಕಾರ್ಯ ನಿರ್ವಹಿಸುತಿದ್ದಾರೆ.ಅವರಲ್ಲಿರುವ ಕೌಶಲ್ಯ ,ಪ್ರತಿಭೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಹಾಗೇಯೆ ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಶಿಕ್ಷಣ ನೀಡುತಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಲು ಪೋಷಕರಲ್ಲಿ ಹಿಂಜರಿಕೆ ಬೇಡ ಹಾಗೇಯೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭಾನ್ವಿತರಾಗಿದ್ದು ಅವರುಗಳಿಗೆ ಉತ್ತಮ ಅವಕಾಶ ಕಲ್ಪಿಸಿ ಕೊಟ್ಟರೆ ಅವರು ದೇಶದ ಉತ್ತಮ ಪ್ರಜೆಯಾಗಿ ರೂಪುಗೊಳ್ಳುತ್ತಾರೆ ಎಂದರು.
ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ನೆರೆದಿದ್ದ ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಎಸ್ ಡಿಎಂ ಸಿ ವತಿಯಿಂದ ಶಾಸಕರಾದ ಬೇಳೂರು ಗೋಪಾಲ ಕೃಷ್ಣ ರವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿಎಂಸಿ ಅಧ್ಯಕ್ಷ ಬಾಲಚಂದ್ರ ಎನ್.ವಹಿಸಿದ್ದರು.
ಕಾರ್ಯಕ್ರಮದಲ್ಲಿ , ಬಾಳೂರು ಗ್ರಾಪಂ ಅಧ್ಯಕ್ಷ ಶ್ರೀನಿವಾಸ್ ಆಚಾರ್, ವೇದಾವತಿ ಬಾಲಚಂದ್ರ ಉಪಾಧ್ಯಕ್ಷೆ ಸದಸ್ಯರಾದ ರಾಜು, ರೇಖಾ ಬಸವ ರಾಜ್ ,ಶಿಕ್ಷಣ ಇಲಾಖೆಯ ಮಂಜುನಾಥ್, ಕರಿಬಸಪ್ಪ ಶಾಲೆಯ ಮುಖ್ಯೋಪಾಧ್ಯಾಯ ಟಿ. ದಾನೇಶಪ್ಪ ಶಿಕ್ಷಕಿ ವನಜಾಕ್ಷಿ ಹಾಗೂ ಇನ್ನಿತರರಿದ್ದರು.